Sat. Jun 6th, 2026

ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಕರೆ

Share this with Friends

ಮಂಗಳೂರು: ಪ್ರತಿಯೊಂದು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ನಿರ್ಮಿಸುವುದು ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ-2013’ (POSH Act) ಕುರಿತ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾಗೃತಿಯೇ ಪ್ರಬಲ ಅಸ್ತ್ರ:

ಉದ್ಯೋಗಸ್ಥ ಮಹಿಳೆಯರು ಕೆಲಸದ ಸ್ಥಳದಲ್ಲಿ ಎದುರಿಸುವ ಕಿರುಕುಳ ಅಥವಾ ಸಮಸ್ಯೆಗಳ ವಿರುದ್ಧ ಮೌನ ವಹಿಸಬಾರದು. ಅನ್ಯಾಯದ ವಿರುದ್ಧ ದನಿಯೆತ್ತುವ ಮೂಲಕ ಕಾನೂನು ಸಮರದ ಹಾದಿ ಹಿಡಿಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಕಾನೂನು ಅರಿವು ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದರು.

ಆಂತರಿಕ ದೂರು ಸಮಿತಿ ಕಡ್ಡಾಯ:

ಹತ್ತು ಅಥವಾ ಅದಕ್ಕಿಂತ ಹೆಚ್ಚು ಮಹಿಳಾ ಉದ್ಯೋಗಿಗಳಿರುವ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ‘ಆಂತರಿಕ ದೂರು ಸಮಿತಿ’ (Internal Committee) ರಚಿಸುವುದು ಕಾನೂನುಬದ್ಧವಾಗಿ ಕಡ್ಡಾಯವಾಗಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಸಂಸ್ಥೆಗಳಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸಮಿತಿ ರಚನೆಯ ವಿವರಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಿರುವುದು ವಿಷಾದನೀಯ. ಈ ಬಗ್ಗೆ ಸಂಸ್ಥೆಗಳು ಗಂಭೀರವಾಗಿ ಗಮನಹರಿಸಬೇಕು ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು, ದೂರು ಸಲ್ಲಿಸುವ ವಿಧಾನ, ಆಂತರಿಕ ಸಮಿತಿಯ ಕಾರ್ಯವೈಖರಿ ಹಾಗೂ ಕಾನೂನು ನೆರವಿನ ಕುರಿತು ಮಹಿಳಾ ಉದ್ಯೋಗಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಲಾಯಿತು. ಜಿಲ್ಲೆಯ ವಿವಿಧ ಇಲಾಖೆಗಳ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

 


Share this with Friends

Related Post