ಬೆಂಗಳೂರು: “ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೇ ಪ್ರಮುಖ ಆರೋಪಿಗಳು” ಎಂದು ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದ್ದು, ಈ ಕುರಿತು ಸಮಗ್ರ ತನಿಖೆಯಾಗಬೇಕು ಹಾಗೂ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಚುನಾವಣಾ ಆಯೋಗದ ಮೌನಕ್ಕೆ ಆಕ್ಷೇಪ
ಮತದಾರರ ಪಟ್ಟಿಯಿಂದ ಸುಮಾರು 13.2 ಕೋಟಿ (ಶೇ. 15ರಷ್ಟು) ಮತದಾರರ ಹೆಸರುಗಳನ್ನು ಯಾವುದೇ ಸಮರ್ಪಕ ಕಾರಣವಿಲ್ಲದೆ ಕೈಬಿಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ದೂರಿದರು. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಪ್ರಶ್ನೆ ಎತ್ತಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದೆ. ಆಯೋಗದ ಇಬ್ಬರು ಆಯುಕ್ತರು ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಟೀಕಿಸಿದರು.
ಅರ್ಜಿಗಳ ದುರುಪಯೋಗ ಮತ್ತು ತಂತ್ರಾಂಶ ಬದಲಾವಣೆ
ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಫಾರ್ಮ್-7 ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಸಚಿವರು, ವಿಜಯಪುರ ಮತ್ತು ಚಿತ್ತಾಪುರದಲ್ಲಿ ಒಂದು ನಿರ್ದಿಷ್ಟ ಸಮುದಾಯದವರ ಹೆಸರುಗಳನ್ನು ಕೈಬಿಡಲು ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರು ಸುಳ್ಳು ದೂರು ನೀಡಿದ್ದಾರೆ ಎಂದರು. ಇಸಿಐನ ಇರೋನೆಟ್ (EroNet) ಜಾಲತಾಣದ ಲಾಗಿನ್ ವ್ಯವಸ್ಥೆ ಹಾಗೂ ಫಾರ್ಮ್-6 ಪ್ರಕ್ರಿಯೆಯ ಸಾಫ್ಟ್ವೇರ್ ಅನ್ನು ಬದಲಾಯಿಸಿ ದುರುಪಯೋಗಕ್ಕೆ ಅವಕಾಶ ಮಾಡಿಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದರು.
ಬರ ಪರಿಹಾರ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ
ಜಿಲ್ಲೆಯ 11 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬೆಳೆ ನಷ್ಟದ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು. ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ (ಎಸ್ಎಪಿ) ನೀಡುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ರೈತರೊಂದಿಗೆ ಚರ್ಚೆ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಒಳಗೊಂಡ ಬಯೋ ಎಕಾನಮಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದ ಅವರು, ಭೀಮಾ ನದಿಗೆ 15 ಟಿಎಂಸಿ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಪ್ರತಿ ತಾಲೂಕಿಗೆ ₹1 ಕೋಟಿ ತುರ್ತು ಅನುದಾನ ನೀಡಲಾಗಿದೆ ಎಂದರು.
ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಲ್ಹಾದ ಜೋಶಿ ಅವರ ವಿರುದ್ಧ ಹರಿಹಾಯ್ದ ಪ್ರಿಯಾಂಕ್ ಖರ್ಗೆ, ಎಚ್ಎಂಟಿ ಮತ್ತು ಎಚ್ಎಎಲ್ನಂತಹ ಬೃಹತ್ ಸಂಸ್ಥೆಗಳನ್ನು ಸ್ಥಾಪಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಕುಮಾರಸ್ವಾಮಿ ಅವರು ಕೇವಲ ಎಚ್ಎಂಟಿ ವಾಚ್ಗಳ ಪ್ರಚಾರಕ್ಕೆ ಸೀಮಿತವಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದ ಕೇಂದ್ರ ಸರ್ಕಾರ, ಈಗ ರಾಜ್ಯದ ಮೇಲೆಯೇ ಆರ್ಥಿಕ ಹೊರೆ ಹೊರಿಸುತ್ತಿದ್ದು, ಬೆಳೆ ವಿಮೆ ಮತ್ತು ಪರಿಹಾರದ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

