ಎಚ್.ಡಿ. ಕೋಟೆ (ಮೈಸೂರು): ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದಮನಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಹೆಗ್ಗಡದೇವನಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ 5 ಲಕ್ಷ ಬಾಂಡ್ ಪಡೆಯಲಾಗುತ್ತಿದೆ. ಆದರೆ ಕಾಂಗ್ರೆಸ್ ಕಾರ್ಯಕರ್ತರ ಟೀಕೆಗಳಿಗೆ ಯಾವುದೇ ಕ್ರಮವಿಲ್ಲ. ಪೊಲೀಸರು ಪಕ್ಷಪಾತ ಧೋರಣೆ ಅನುಸರಿಸಿದರೆ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಆರ್ಥಿಕ ದಿವಾಳಿತನ ಮತ್ತು ರೈತರ ಕಡೆಗಣನೆ:
ರಾಜ್ಯದಲ್ಲಿ ಬರಗಾಲ ಮತ್ತು ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ. ಬಿಸಿಯೂಟ, ಆಶಾ ಹಾಗೂ ಪೌರಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ ಬೀದಿಗಿಳಿಯುವಂತೆ ಮಾಡಲಾಗಿದೆ. ಆರ್ಥಿಕ ಇಲಾಖೆ ಖಜಾನೆ ಖಾಲಿಯಾಗಿದೆ ಎಂದು ಎಚ್ಚರಿಸಿದ್ದರೂ, ಸರ್ಕಾರದ ಪ್ರಮುಖರು ದೆಹಲಿಯ ಕಾರ್ಯಕ್ರಮಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ತಿಂಗಳಿಗೆ 2,000 ನೀಡಿ, ಬೆಲೆ ಏರಿಕೆ ಮೂಲಕ ಪ್ರತಿ ಕುಟುಂಬದ ಮೇಲೆ 10,000 ಹೊರೆ ಹೇರಲಾಗಿದೆ. ಇದನ್ನು ಖಂಡಿಸಿ ನವೆಂಬರ್ 19ರಂದು ಮಂಗಳೂರಿನಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅಶೋಕ್ ತಿಳಿಸಿದರು.
2028ಕ್ಕೆ ಎನ್ಡಿಎ ಅಧಿಕಾರಕ್ಕೆ:
ಆಡಳಿತ ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದಾಗಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ವನ್ಯಜೀವಿ ದಾಳಿಯಿಂದ ಕಾಡಂಚಿನ ಜನರು ಸಂಕಷ್ಟದಲ್ಲಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಮತ್ತೆ ಎನ್ಡಿಎ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಭಗವಾನ್ ಬಿರ್ಸಾ ಮುಂಡಾ ಸ್ಮರಣೆ:
ಇದೇ ವೇಳೆ ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಶೋಕ್, ಬ್ರಿಟಿಷರ ವಿರುದ್ಧ ಹೋರಾಡಿದ ಆದಿವಾಸಿ ನಾಯಕನ ಕೊಡುಗೆಯನ್ನು ದೇಶ ಸದಾ ಸ್ಮರಿಸಬೇಕು. ಕೇಂದ್ರ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 1.5 ಲಕ್ಷ ಕೋಟಿ ಅನುದಾನ ನೀಡಿದೆ. ಮುಂದೆ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಜಮೀನು ಮತ್ತು ಮೂಲಸೌಕರ್ಯ ಸಮಸ್ಯೆಗಳನ್ನು ಶಾಶ್ವತವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

