ಬೆಂಗಳೂರು,ಮೇ.6: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು
ಎಸ್ಐಟಿ ತಿಳಿಸಿದೆ.
ಈ ಬಗ್ಗೆ ವಿಶೇಷ ತನಿಖಾ ತಂಡದ ಮುಖ್ಯಸ್ಥ ಬಿ.ಕೆ.ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಪ್‌ನಂತಹ ಮೆಸೆಂಜರ್ ಆಪ್ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ 63609 38947 ಈ ನಂಬರ್ ಅನ್ನು ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ, ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಅಭಯ ನೀಡಿದ್ದಾರೆ.
ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಸೂಚಿಸಲಾಗುತ್ತಿದೆ.
ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು,ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಎಂದು ಸಲಹೆ ನೀಡಿದ್ದಾರೆ.
ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿ ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸಿಲರ್‌ಗಳು, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರು ಈ ವಿಚಾರದಲ್ಲಿ ಸ್ಪಂದಿಸುವ ಅಗತ್ಯವಿದೆ ಎಂದು ಬಿ.ಕೆ.ಸಿಂಗ್ ಹೇಳಿದ್ದಾರೆ.