Mon. Dec 23rd, 2024

ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿ.ಕೆ.ಶಿ ಸ್ಪೋಟಕ ಹೇಳಿಕೆ

Share this with Friends

ಬೆಂಗಳೂರು, ಮೇ.30: ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು ಶತ್ರು ಭೈರವಿ ಯಾಗ ಪ್ರಯೋಗ ನಡೆಸಲಾಗಿದೆ,ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ,ನಾನು ದೇವರನ್ನು ನಂಬುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ನಾವು ನಂಬಿರುವ ಶಕ್ತಿ, ದೇವರು ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡುತ್ತದೆ,
ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ.

ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ ರಾಜಕಂಟಕ, ಮಾರಣ ಮೋಹನ ಸ್ತಂಭನ ಯಾಗ ಪ್ರಯೋಗ ನಡೆಸಲಾಗುತ್ತಿದೆ. ಯಾರು ಈ ಯಾಗ ಮಾಡಿಸುತ್ತಿದ್ದಾರೆ ಎಂಬ ವಿವರವನ್ನು ಈ ಯಾಗದಲ್ಲಿ ಪಾಲ್ಗೊಂಡವರೇ ನಮಗೆ ತಿಳಿಸಿದ್ದಾರೆ ಎಂದು ಡಿಕೆಶಿ ಹೇಳಿದರು.

ಅಘೋರಿಗಳ ಮೂಲಕ ಈ ಯಾಗ ನಡೆಯುತ್ತಿದೆ. ಇದಕ್ಕಾಗಿ ಪಂಚ ಬಲಿ ನೀಡಲಾಗುತ್ತಿದ್ದು, ಕೆಂಪು ಬಣ್ಣದ 21 ಮೇಕೆ, 3 ಎಮ್ಮೆ, ಕಪ್ಪು ಬಣ್ಣದ 21 ಕುರಿ ಹಾಗೂ 5 ಹಂದಿಗಳ ಬಲಿ ಮೂಲಕ ಈ ಮಾಂತ್ರಿಕ ಯಾಗ ನಡೆಯುತ್ತಿದೆ ಎಂದು ಹೇಳಿದರು.

ಅವರ ಪ್ರಯತ್ನ ಅವರು ಮಾಡಲಿ, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ,ಅವರವರ ನಂಬಿಕೆ ಅವರದು, ಹೀಗಾಗಿ ಇಂತಹ ಪ್ರಯತ್ನ ಮಾಡುತ್ತಾರೆ. ಅವರು ನಮ್ಮ ಮೇಲೆ ಏನೇ ಪ್ರಯೋಗ ಮಾಡಿದರೂ ನಾನು ನಂಬಿರುವ ಶಕ್ತಿ ನಮ್ಮನ್ನು ಕಾಪಾಡಲಿದೆ. ನಾನು ಪ್ರತಿನಿತ್ಯ ಮನೆಯಿಂದ ಹೊರಡುವ ಮುನ್ನ ದೇವರಿಗೆ ಒಂದು ನಿಮಿಷ ಕೈಮುಗಿದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಈ ಪ್ರಯೋಗ ಮಾಡಿಸುತ್ತಿರುವುದು ಯಾರು ಎಂಬ ಪ್ರಶ್ನೆಗೆ ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

ನಿಮ್ಮನ್ನೇ ಏಕೆ ಗುರಿ ಮಾಡುತ್ತಾರೆ ಎಂಬ ಮತ್ತೊಂದು ಪ್ರಶ್ನೆಗೆ ಯಾವಾಗಲೂ ರಾಜಕೀಯವಾಗಿ ಚಟುವಟಿಕೆಯಿಂದ ಇರುವವರು ವಿರೋಧಿಗಳ ಕೆಂಗಣ್ಣಿಗೆ ಗುರಿ ಆಗುತ್ತಾರೆ, ಮಾಡೋರು ಏನಾದರೂ ಮಾಡಿಕೊಳ್ಳಲಿ, ನಾನು ಅಂತಹ ಯಾವುದೇ ಚಟುವಟಿಕೆ ಮಾಡುವುದಿಲ್ಲ ದೇವರನ್ನು ನಂಬಿದ್ದೇನೆ ದೇವರೇ ಕಾಪಾಡುತ್ತಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.


Share this with Friends

Related Post