Mon. Dec 23rd, 2024

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲೋಪವಾಗಬಾರದು: ಶಿವರಾಜು ಸೂಚನೆ

Share this with Friends

ಮೈಸೂರು, ಫೆ.29:‌ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು,ಯಾವುದೇ‌ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 49 ಕೇಂದ್ರಗಳಲ್ಲಿ ಜರುಗಲಿದ್ದು ಯಾವುದೇ ಲೋಪದೋಷಗಳಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ತಿಳಿಸಿದರು.

ಜಿಲ್ಲಾಧಿಕಾರಿಕಗಳ ಕಛೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ 31,628 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ,ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಿ ಎಂದು ಸೂಚಿಸಿದರು.

ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಇರಲಿ ಎಂದು ಸಲಹೆ ನೀಡಿದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದು ಆದೇಶಿಸಿದರು.

ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಿ.

ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆ ವಿತರಕರ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಪಿ.ಶಿವರಾಜ್ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಮರಿಸ್ವಾಮಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.


Share this with Friends

Related Post