Thu. Nov 19th, 2026

‘2029ರಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು’: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕರೆ

Share this with Friends

ಚಿಕ್ಕಮಗಳೂರು: ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ಕೇವಲ ಶ್ರೀಮಂತರು ಮತ್ತು ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಸುಧಾರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಗುರುವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜೇಗೌಡರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಚಿಕ್ಕಮಗಳೂರು ಜಿಲ್ಲೆಗೂ ಇಂದಿರಾ ಗಾಂಧಿಯವರಿಗೂ ಅವಿನಾಭಾವ ಸಂಬಂಧವಿದೆ. 1978ರಲ್ಲಿ ಮೋಟಮ್ಮನವರ ವಿವಾಹ ಸಮಾರಂಭದಲ್ಲಿಯೂ ಅವರು ಪಾಲ್ಗೊಂಡಿದ್ದರು. ‘ಗರೀಬಿ ಹಟಾವೋ’ ಹಾಗೂ 20 ಅಂಶಗಳ ಕಾರ್ಯಕ್ರಮದ ಮೂಲಕ ಬಡತನ ನಿರ್ಮೂಲನೆಗೆ ಅವರು ಶ್ರಮಿಸಿದ್ದರು,” ಎಂದು ಸ್ಮರಿಸಿದರು.

ನೆಹರು ಕುಟುಂಬದ ವಿರುದ್ಧ ಬಿಜೆಪಿಗೆ ಹೊಟ್ಟೆಕಿಚ್ಚು:

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಜವಾಹರಲಾಲ್ ನೆಹರು ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಕಾಂಗ್ರೆಸ್ ಕೊಡುಗೆಯನ್ನು ಸ್ಮರಿಸಿದ ಸಿದ್ದರಾಮಯ್ಯ, “ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ದೇಶಕ್ಕೆ ಅಪಾರ ಕೊಡುಗೆ ನೀಡಿದ ನೆಹರು ಕುಟುಂಬವನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆಕಿಚ್ಚು,” ಎಂದು ಟೀಕಿಸಿದರು. ಮೋದಿ ಅಧಿಕಾರಕ್ಕೆ ಬರುವ ಮುನ್ನ 53 ಲಕ್ಷ ಕೋಟಿ ರೂ. ಇದ್ದ ದೇಶದ ಸಾಲ ಈಗ 200 ಲಕ್ಷ ಕೋಟಿ ರೂ.ಗೆ ಏರಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮತ್ತು ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆಗಳು ಹುಸಿಯಾಗಿವೆ ಎಂದು ಆರೋಪಿಸಿದರು.

ಬರ ಪರಿಹಾರ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನ್ಯಾಯ:

ರಾಜ್ಯದ 240 ತಾಲೂಕುಗಳ ಪೈಕಿ 224 ತಾಲೂಕುಗಳಲ್ಲಿ ಭೀಕರ ಬರಗಾಲವಿದ್ದು, ಸುಮಾರು 62 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ. ಎನ್‌ಡಿಆರ್‌ಎಫ್ ಮಾನದಂಡದಂತೆ 21 ಸಾವಿರ ಕೋಟಿ ರೂ. ಪರಿಹಾರ ಕೇಳಿದರೂ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ನೀಡಿಲ್ಲ. ಅಲ್ಲದೆ, 2023-24ರ ಬಜೆಟ್‌ನಲ್ಲಿ ಘೋಷಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯ 5,300 ಕೋಟಿ ರೂ. ಅನುದಾನದಲ್ಲಿ ಇದುವರೆಗೂ ಐದು ಪೈಸೆಯನ್ನೂ ಬಿಡುಗಡೆ ಮಾಡದೆ ಕರ್ನಾಟಕಕ್ಕೆ ನಿರಂತರ ಅನ್ಯಾಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಮತದಾರರ ಪಟ್ಟಿ ಕಡಿತಕ್ಕೆ ಆಕ್ಷೇಪ; ಸ್ಥಳೀಯ ಸಂಸ್ಥೆ ಗೆಲುವಿಗೆ ಕರೆ:

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳನ್ನು ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಅರ್ಹ ಮತದಾರರು ಹಕ್ಕಿನಿಂದ ವಂಚಿತರಾಗದಂತೆ ಕಾರ್ಯಕರ್ತರು ಎಚ್ಚರ ವಹಿಸಬೇಕು ಎಂದರು. ನೂತನ ಜಿಲ್ಲಾಧ್ಯಕ್ಷ ಮಂಜೇಗೌಡರ ನೇತೃತ್ವದಲ್ಲಿ ಮುಂಬರುವ ಗ್ರಾ.ಪಂ, ತಾ.ಪಂ, ಜಿ.ಪಂ ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳನ್ನು ಗೆಲ್ಲಬೇಕು. ತಾವು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, 2029ರಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಎಲ್ಲರೂ ಟೊಂಕಕಟ್ಟಿ ನಿಲ್ಲಬೇಕು ಎಂದು ಕರೆ ನೀಡಿದರು.

 


Share this with Friends

Related Post