Thu. Dec 26th, 2024

ಮಾ.25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ

SSLC Exam
Share this with Friends

ಬೆಂಗಳೂರು : ಮಾ.25 ರಿಂದ ಏ.06 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 4,58,427 ಬಾಲಕರು, 4,37,844 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ಕೆಎಸ್ಆರ್ಟಿಸಿ ಉಚಿತ ಪ್ರಯಾಣ ವ್ಯವಸ್ಥೆ :
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.


Share this with Friends

Related Post