ಬೆಂಗಳೂರು.ಮಾ.27 : ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು – ಕೊಡಗು ಟಿಕೆಟ್ ಕೈತಪ್ಪಿದ ಬೆನ್ನಲ್ಲಿಯೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಮಾಹಿತಿ ನೀಡಿದ್ದು, ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಜೂನ್‌ನಲ್ಲಿ ಪರಿಷತ್ ಸದಸ್ಯ ಸ್ಥಾನದ ಅವಧಿ ಮುಗಿಯಲಿದ್ದು, ಮೂರು ತಿಂಗಳು ಮುಂಚೆಯೇ ರಾಜೀನಾಮೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು – ಕೊಡಗು ಲೋಕಸಭಾ ಟಿಕೆಟ್‌ಗೆ ತೇಜಸ್ವಿನಿಗೌಡ ಬೇಡಿಕೆ ಇಟ್ಟಿದ್ದರು. ಆದರೆ, ಬೆಂಗಳೂರು ಗ್ರಾಮಾಂತರದಲ್ಲಿ ಡಾ ಸಿಎನ್ ಮಂಜುನಾಥ್ ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ಒಡೆಯರ್‌ಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ತೇಜಸ್ವಿನಿ ಗೌಡ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದು, ಮೊದಲ ಹಂತವಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪತ್ರಕರ್ತೆಯಾಗಿದ್ದ ತೇಜಸ್ವಿನಿ ಗೌಡ 2004ರಲ್ಲಿ ಕಾಂಗ್ರೆಸ್ ಸೇರಿದ್ದರು. ಅದೇ ಲೋಕಸಭಾ ಚುನಾವಣೆಯಲ್ಲಿ ಕನಕಪುರದಿಂದ ಸ್ಪರ್ಧಿಸಿದ್ದ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಿರುದ್ಧ ಗೆಲುವು ಸಾಧಿಸಿದ್ದರು. ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ಬೆಂಗಳೂರು ಗ್ರಾಮಾಂತರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ತೇಜಸ್ವಿನಿ ಗೌಡ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎದುರು ಸೋಲು ಅನುಭವಿಸಿದ್ದರು. ಅದಾದ ಬಳಿಕ 2014ರಲ್ಲಿ ಬಿಜೆಪಿಗೆ ಸೇರಿದ್ದ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯರಾಗಿದ್ದರು. ಈಗ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.