Tue. Dec 24th, 2024

ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ;ಇದರಲ್ಲಿ ಕಾಂಗ್ರೆಸ್ಗೆ ಗೆಲುವು:ಸಿಎಂ

Share this with Friends

ಬೆಳಗಾವಿ , ಮೇ.5: ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದ್ದು,ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದೆ, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ,ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿವೆ,ಆದರೆ ಅವರಿಗೆ 200 ಸ್ಥಾನ ಬರುವುದೂ ಕಷ್ಟ ಎಂದು ಹೇಳಿದರು.

ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದು ‌ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಬಹಳ ಅನುಕೂಲ‌ ಆಗಿದೆ,
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದರಿಂದ ಜನರಿಗೆ ವಿಶ್ವಾಸ ಬಂದಿದೆ,ನಾವು ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಸುಳ್ಳು ಹರಡಿದರು ಎಂದು ಸಿದ್ದರಾಮಯ್ಯ ಟೀಕಾಪ್ರಹಾರ‌ ನಡೆಸಿದರು.

ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014 ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಲಾಭ ದೊರಕಿಸಿಕೊಡಲು ಜಾತಿ ಗಣತಿ ಅತಿ ಮುಖ್ಯ,ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಗಳನ್ನು ಜಾರಿ ಮಾಡಲಾಗಿದೆ. ಮೋದಿಯವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ. ಗೆ ಕೇವಲ 13 ರೂ. ಮರಳಿ ಬರುತ್ತಿರುವುದು ನಮಗಾಗಿರುವ ಅನ್ಯಾಯ ಎಂದು ವಿವರಿಸಿದರು.

ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ,ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ ಎಂಬುದು ನೆನಪಿರಲಿ ಈ ಬಾರಿ ರಾಜ್ಯದಿಂದ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ,ಡಿಸಿಎಂ ಡಿ.ಕೆ.ಶಿವಕುಮಾರ್,ಸಚಿವ ಹೆಚ್.ಸಿ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.


Share this with Friends

Related Post