ಮೈಸೂರು: ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧ ಮಾಡಲಾಗಿದೆ.
ಈ ನಿಯಮ ಉಲ್ಲಂಘಿಸಿದರೆ ಸಂಬಂದಿಸಿದವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವರಾಜು ಮಾತನಾಡಿದರು.
ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಯನ್ನು (ಕೋಟ್ಪಾ) ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸಲಹೆ ನೀಡಿದರು.
ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರವಾನಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಇರುವ ಸ್ಕ್ವಾಡ್ ಟೀಮ್ ಗಳು ಅನಿರೀಕ್ಷಿತವಾಗಿ ರೈಡ್ ಗಳನ್ನು ಮಾಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ನಿಯಮ ಉಲ್ಲಂಘನೆ ಆಗಿರುವ ಕುರಿತು ಪ್ರಕರಣಗಳನ್ನು ದಾಖಲಿಸಬೇಕು.
ಯುವ ಸಮೂಹ ಸಾರ್ವಜನಿಕ ಸ್ಥಳಗಳಲ್ಲಿ ಕಾಲೇಜು ಆವರಣಗಳಲ್ಲಿ ಬೀಡಿ ಸಿಗರೇಟು ಸೇವನೆ ಮಾಡುವುದನ್ನು ನಿಲ್ಲಿಸಬೇಕು. ಉಲ್ಲಂಘನೆ ಮಾಡಿದರೆ ಪೊಲೀಸ್ ಇಲಾಖೆ ದಂಡ ವಿದಿಸಬೇಕು ಎಂದು ಆದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸವಿತಾ (ಅಭಿವೃದ್ಧಿ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ನಾಗರಾಜು, ಜಿಲ್ಲಾ ಸಮಾಲೋಚಕರಾದ ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.