Fri. Mar 6th, 2026

ಪ್ರವಾಸಿ ಬೋಡ್ ನೋಂದಣಿಗೆ 45 ದಿನ ಗಡುವು ನೀಡಿದ ಉಡುಪಿ‌ ಡಿಸಿ

Share this with Friends

ಉಡುಪಿ:ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿಯನ್ನು ಪಡೆದುಕೊಳ್ಳಬೇಕು,ಅನುಮತಿಯನ್ನು ಪಡೆಯದೇ ಇರುವ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.

ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ, ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಂಡರು. ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿಯನ್ನು ಪಡೆದೇ ಕಡಲಿಗೆ ಇಳಿಯಬೇಕಿದ್ದು,  ಈ ಸಂಬಂಧ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿಯನ್ನು ಪಡೆದುಕೊಳ್ಳುವಂತೆ ಸೂಚಿಸಲಾಯಿತು.

ಇನ್ಮುಂದೆ ಅನುಮತಿಯನ್ನು ಪಡೆಯದೇ ಇರುವ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಅನುಮತಿ ಪಡೆದ ಪ್ರವಾಸಿ ಬೋಟ್‌ಗಳು ಪ್ರತೀ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕಾಗಿರುತ್ತದೆ. ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಠಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು.  ಪ್ರವಾಸಿ ಬೋಟ್‌ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಉದ್ದೇಶಕ್ಕೆ ಬಳಸುವ ಪ್ರವಾಸಿ ಬೋಟ್ ಮಾಲೀಕರುಗಳ ಸಭೆಯನ್ನು ಶೀಘ್ರದಲ್ಲಿ ಕರೆದು ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಪರವಾನಿಗೆಯನ್ನು ಪಡೆಯುವಂತೆ,  ಪ್ರವಾಸಿ ಬೋಟ್‌ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸುವ ಬಗ್ಗೆ,  ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವ ಬಗ್ಗೆ,  ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.


Share this with Friends

Related Post