Fri. Mar 6th, 2026

ಕೆಎನ್ ರಾಜಣ್ಣ ಬಗ್ಗೆ ಡಿಸಿಎಂ ಹೇಳಿಕೆಗೆ ಸಿಎಂ ಹೇಳಿದ್ದೇನು?

Share this with Friends

ಮೈಸೂರು:ಕೆಎನ್ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಆಪ್ತನ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ‌‌.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ  ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ,ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ.  ಎಸ್.ಎಂ ಕೃಷ್ಣ ಅವರು ಆಗ  ಮುಖ್ಯಮಂತ್ರಿಗಳಿದ್ದರು,ಸರ್ಕಾರ ಮಾಡಿತ್ತು ಎಂದು ರಾಜಣ್ಣ ಪರ ಬ್ಯಾಟಿಂಗ್ ಮಾಡಿ ಡಿಕೆ ಶಿವಕುಮಾರ್ ಹೇಳಿಕೆಯನ್ನು ಬೆಣ್ಣೆಯಲ್ಲಿ ಕೂದಲು ತೆಗೆದ ರೀತಿ ತಳ್ಳಿಹಾಕಿದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?:

ಮಾಜಿ ಸಚಿವ ಕೆ. ಎನ್ ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ  ನೀಡಿ ಭೇಟಿ ಮಾಡಲಿ, ಡಿ.ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದು ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ:

ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23  ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಕಾಯ್ದೆ ವಿರೋಧಿಸುತ್ತಾರೆ:

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ  ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು  ಅವರು ಹೇಳಿದರು.

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು:

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ.ಈ ಸಂಬಂಧನಾನು ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು. ನಾಯಕತ್ವ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ,ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಹ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.


Share this with Friends

Related Post