Mon. Dec 23rd, 2024

ನಮ್ಮ ನಾಡಿಗೆ ಪ್ರವಾಹ ಬಂದಾಗ ಬಾರದ ಮೋ ದಿ;ಚುನಾವಣೆ ಬಂತು ರಾಜ್ಯಕ್ಕೆ ಬಂದ್ರು:ಸಿದ್ದು ಟೀಕೆ

Share this with Friends

ಮೈಸೂರು, ಏ. 2: ನಮ್ಮ ನಾಡಿಗೆ ಪ್ರವಾಹ,
ಬರಗಾಲ ಬಂದಾಗ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗ ಮೋದಿ ಬರಲಿಲ್ಲ,ಈಗ ಚುನಾವಣೆ ಬಂತು ರಾಜ್ಯಕ್ಕೆ ಬಂದ್ರು ಮೋದಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ,ಮೋದಿಯವರು ಈ ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಭಾರತೀಯರನ್ನು ಮರಳು ಮಾಡಿದ್ದು ಬಿಟ್ಟರೆ,ದೇಶದ ಜನರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ, ಹತ್ತು ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ, ಯಾವುದನ್ನೂ ಮಾಡದೆ ಹತ್ತು ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ ಎಂದು ಪ್ರಶ್ನಿಸಿದರು.

ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಜನತೆಗೆ‌ ಸಿಎಂ ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು. ದೇವೇಗೌಡರ ಕುರಿತು ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ಸಿಎಂ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್,ಶಾಸಕರಾದ ತನ್ವೀರ್ ಸೇಠ್,ಹರೀಶ್ ಗೌಡ‌ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.


Share this with Friends

Related Post