Fri. Mar 6th, 2026

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ?: ಡಿಸಿಎಂ ಏನಂದ್ರು ಗೊತ್ತಾ?

Share this with Friends

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯ ದುರುಪಯೋಗ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಗಂಭೀರ ಸಮಾಲೋಚನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಕ್ಕಳ ಮೇಲೆ ಮೊಬೈಲ್ ಬೀರುತ್ತಿರುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಪೋಷಕರಿಂದ ತೀವ್ರ ಒತ್ತಡ ಕೇಳಿಬರುತ್ತಿದೆ. ಈಗಾಗಲೇ ಹಲವು ಅಂತರರಾಷ್ಟ್ರೀಯ ಶಾಲೆಗಳಲ್ಲಿ ಈ ನಿಯಮ ಜಾರಿಯಲ್ಲಿದೆ. ಜಾಗತಿಕ ಮಟ್ಟದಲ್ಲೂ ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದರು.

‘ಕೆರೆ ನೀರು ಕುಡಿಯಲಿಕ್ಕಲ್ಲ’

ಬೆಂಗಳೂರಿನ ಕೆರೆಗಳ ನೀರಿನ ಗುಣಮಟ್ಟ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ನಗರದ ಕೆರೆಗಳು ಕೇವಲ ಅಂತರ್ಜಲ ವೃದ್ಧಿಗಾಗಿ ಇವೆಯೇ ಹೊರತು, ಅವುಗಳ ನೀರು ಕುಡಿಯಲು ಅಥವಾ ಸ್ನಾನ ಮಾಡಲು ಯೋಗ್ಯವಲ್ಲ. ಕುಡಿಯುವ ನೀರಿಗಾಗಿ ಬೆಂಗಳೂರು ಜಲಮಂಡಳಿ (BWSSB) ವತಿಯಿಂದ ಶುದ್ಧೀಕರಣ ಘಟಕಗಳ ಮೂಲಕ ವ್ಯವಸ್ಥೆ ಮಾಡಲಾಗುತ್ತಿದೆ,” ಎಂದು ಸ್ಪಷ್ಟಪಡಿಸಿದರು.

ನರೇಗಾ ಅನುದಾನಕ್ಕೆ ಆಗ್ರಹ: ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು, ಬಡವರ ಪರವಾಗಿ ಚಿಕ್ಕಬಳ್ಳಾಪುರದಲ್ಲಿ ‘ನರೇಗಾ ಬಚಾವೋ’ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಹದೇವಪ್ಪ ಅವರಿಗೆ ನಮಸ್ಕಾರ ಎಂದ ಡಿಸಿಎಂ!

ಸಚಿವ ಎಚ್.ಸಿ. ಮಹದೇವಪ್ಪ ಅವರು ಇತ್ತೀಚೆಗೆ ಪುನರುಚ್ಚರಿಸಿರುವ ‘ದಲಿತ ಮುಖ್ಯಮಂತ್ರಿ’ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅತ್ಯಂತ ಚತುರತೆಯಿಂದ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಯಾವುದೇ ವಿವಾದಕ್ಕೆ ಆಸ್ಪದ ನೀಡದೆ ಮೌನವಾಗಿ ನುಣುಚಿಕೊಂಡರು.”ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರ ಹೇಳಿಕೆಗಳ ಬಗ್ಗೆ ನಾನು ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಇಲ್ಲಿಂದಲೇ ಒಂದು ನಮಸ್ಕಾರ,” ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಚರ್ಚೆಗೆ ತೆರೆ ಎಳೆದರು. ಆ ಮೂಲಕ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಲು ಪ್ರಯತ್ನಿಸಿದರು.

 


Share this with Friends

Related Post