ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಮೂಡಾ ಹಗರಣದ ಬಗ್ಗೆ ಮಾಹಿತಿ ನೀಡುವಂತೆ ಇಡಿ ಮುಡಾ ಅಧಿಕಾರಿಗಳಿಗೆ ಮೂರು ಬಾರಿ ನೋಟಿಸ್ ನೀಡಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ, ದಾಳಿ ಹಿಂದೆ ಯಾವುದೇ ರಾಜಕೀಯ ದ್ವೇಷ ಇಲ್ಲ ಎಂದು ಯದುವೀರ್ ಹೇಳಿದರು.
ಮುಡಾದಲ್ಲಿ ನಡೆದಿದೆ ಎನ್ನಲಾದ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿಯವರಿಗೆ ನೀಡಲಾಗಿರುವ 14 ಸೈಟ್ ಗಳ ಕುರಿತು ಮಾತ್ರ ಅಲ್ಲ ಮುಡಾದಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆಯೂ ಸಿಬಿಐ ತನಿಖೆ ನಡೆಯಬೇಕು ಎಂದು ಯದುವೀರ್ ಒತ್ತಾಯಿಸಿದರು.
ಮೈಸೂರು ಏರ್ಪೋರ್ಟ್ ನಲ್ಲಿ ರನ್ ವೇ ಕಾರ್ಯ ನಡೆಯುತ್ತಿರುವುದರಿಂದ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳು ಆಗಮಿಸುತ್ತಿಲ್ಲ ಎಂದು ಸಂಸದರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ನಾಗೇಂದ್ರ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.